spot_img
Wednesday, January 22, 2025
spot_img

ಗಂಗೊಳ್ಳಿ ಜೆಟ್ಟಿ ಕುಸಿತ: ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯ ಕ್ರಮ-ಸಚಿವ ಎಸ್.ಅಂಗಾರ

ಗಂಗೊಳ್ಳಿ : ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ ಪ್ರಕರಣವನ್ನು ಖಾಸಗಿ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾದರೂ ಮೇಲೆ ಸರಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿದೆ. ಕಾಮಗಾರಿಯ ವಿನ್ಯಾಸ ಸಿದ್ಧಪಡಿಸಿದ ಸಂಸ್ಥೆ, ಇಂಜಿನಿಯರ್, ಗುತ್ತಿಗೆದಾರರು ಕಾಮಗಾರಿಯ ಬಗ್ಗೆ ಗಮನ ಹರಿಸಬೇಕಿತ್ತು. ತನಿಖೆಯಲ್ಲಿ ತಪ್ಪು ಯಾರಿಂದ ಆದರೂ ಅವರ ಮೇಲೆ ಕ್ರಮವಾಗಲಿದೆ. ಗುತ್ತಿಗೆದಾರದ್ದೇ ತಪ್ಪು ಕಂಡು ಬಂದರೂ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ, ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಎಸ್.ಅಂಗಾರ ಹೇಳಿದರು.

ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಗುರುವಾರ ಭೇಟಿ ನೀಡಿದ ಅವರು ಜೆಟ್ಟಿ ಕುಸಿತ ಪ್ರದೇಶವನ್ನು ವೀಕ್ಷಿಸಿ ಸುದ್ಧಿಗಾರರೊಂದಿಗೆ ಮಾತನಾಡಿದರು.

ಜೆಟ್ಟಿ ಕುಸಿತದಿಂದ ಮೀನುಗಾರಿಕೆಗೆ ತೊಂದರೆಯಾಗದಂತೆ ಆದಷ್ಟು ಶೀಘ್ರ ಜೆಟ್ಟಿ ಪುನರ್ ನಿರ್ಮಾಣ ಮಾಡಲು ಸರಕಾರ ಕ್ರಮಕೈಗೊಳ್ಳಲಿದೆ ಎಂದು ಹೇಳಿದ ಅವರು, ಪುಣೆಯ ಸಿಡಬ್ಲ್ಯುಪಿ‌ಆರ್‌ಎಸ್ ಸಂಸ್ಥೆಯ ಬದಲು ಬೆಂಗಳೂರಿನ ಖಾಸಗಿ ಸಂಸ್ಥೆಯವರು ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿಯ ವಿನ್ಯಾಸ ಮಾಡಿದ ಬಗ್ಗೆ ಕೇಳಿ ಬಂದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು ವಿವಿಧ ಸಂಸ್ಥೆಗಳು ಬೇರೆ ಬೇರೆ ತಾಂತ್ರಿಕತೆ ಬಗ್ಗೆ ವಿನ್ಯಾಸ ನೀಡುತ್ತಿದ್ದು, ನೀಡಿದ ವಿನ್ಯಾಸದಲ್ಲಿ ಲೋಪ ಕಂಡು ಬಂದಲ್ಲಿ ಕ್ರಮಕೈಗೊಂಡು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಲು ಸರಕಾರ ಸಿದ್ಧವಿದೆ ಎಂದು ಅವರು ಹೇಳಿದರು.

12 ಕೋಟಿ ರೂ. ವೆಚ್ಚದ ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿಯಲ್ಲಿ ಯಾವ ಯಾವ ಹಂತದಲ್ಲಿ ಎಷ್ಟೆಷ್ಟು ಬಿಲ್ಲು ಮಾಡಿದ್ದಾರೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಪಡೆದುಕೊಂಡು ಸೂಕ್ತ ಕ್ರಮಕೈಗೊಳ್ಳಲಾಗುವುದು. ಜೆಟ್ಟಿ ಕುಸಿತವನ್ನು ಯಾವ ತನಿಖಾ ಸಂಸ್ಥೆಗೆ ನೀಡಬೇಕು ಎನ್ನುವುದನ್ನು ಸೋಮವಾರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಸಿದ್ಧರಾಮಯ್ಯ ಹೇಳಿಕೆಯಲ್ಲಿ ಹುರುಳಿಲ್ಲ:
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಡಿದ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ಧರಾಮಯ್ಯ ರಾಜಕೀಯಕ್ಕಾಗಿ ಇಂತಹ ಆರೋಪಗಳನ್ನು ಮಾಡುತ್ತಿದ್ದಾರೆ. ಯಾರು ಕಮೀಷನ್ ಪಡೆದಿದ್ದಾರೆ, ಎಷ್ಟು ಪಡೆದಿದ್ದಾರೆ ಎಂಬುದನ್ನು ಸಿದ್ಧರಾಮಯ್ಯ ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಮೀಷನ್ ವ್ಯವಹಾರ ಇರಲಿಲ್ಲವಾ? ಕಾಂಗ್ರೆಸ್ ಆಡಳಿತದಲ್ಲಿ ಹಗರಣಗಳು, ಭ್ರಷ್ಟಾಚಾರ ನಡೆದಿರಲಿಲ್ಲವೇ ಎಂದು ಪ್ರಶ್ನಸಿದ ಅವರು ಬಿಜೆಪಿ ಸರಕಾರದ ಅವಧಿಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಾಗ ಅದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಸಿದ್ಧರಾಮಯ್ಯ ಹಾಗೂ ಕಾಂಗ್ರೆಸಿಗರು ಹತಾಶರಾಗಿ ಈ ರೀತಿಯ ಟೀಕೆಗಳನ್ನು ಮಾಡುತ್ತಿದ್ದು ಅವರು ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಅವರ ಈ ಪ್ರಶ್ನೆಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದ ಅವರು, ಜೆಟ್ಟಿ ಕುಸಿದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಡಾ.ಕೂರ್ಮರಾವ್, ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ, ಬಂದರು ಮತ್ತು ಮೀನುಗಾರಿಕೆ ಇಲಾಖೆ ಇಂಜಿನಿಯರ್ ಶ್ರೀನಿವಾಸ ಮೂರ್ತಿ, ಮೀನುಗಾರಿಕೆ ಇಲಾಖೆ ಅಪರ ನಿರ್ದೇಶಕ ಪಿ.ನಾಗರಾಜ್, ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಾದ ಗಣೇಶ, ಉದಯಕುಮಾರ್, ಸುಮಲತಾ, ದಿವಾಕರ ಖಾರ್ವಿ, ಉಪನಿರ್ದೇಶಕ ಕುಮಾರಸ್ವಾಮಿ, ಕುಂದಾಪುರ ಡಿವೈ‌ಎಸ್‌ಪಿ ಶ್ರೀಕಾಂತ್, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಬಂದರು ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಮೀನುಗಾರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!