
ಕುಂದಾಪುರ: ಉಡುಪಿ ಜಿಲ್ಲೆಯ ಹಿರಿಯ ಕಾರ್ಮಿಕ ನಾಯಕ ಯು. ದಾಸ ಭಂಡಾರಿ (80) ಮಂಗಳವಾರ ತಡರಾತ್ರಿ ಕೋಣಿಯ ಸ್ವಗ್ರಹದಲ್ಲಿ ನಿಧನರಾದರು.
ಉಡುಪಿ ಜಿಲ್ಲೆಯಲ್ಲಿ ಕಾರ್ಮಿಕ ಚಳವಳಿಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಅವರು ಕಾರ್ಮಿಕ ಸಂಘಟನೆಗಳನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭೂಸುಧಾರಣೆಯ ಹೋರಾಟದ ಸಮಯದಲ್ಲಿ ದೈಹಿಕ ಹಲ್ಲೆಗೆ ಒಳಗಾಗಿದ್ದರೂ ಹೋರಾಟದಿಂದ ಹಿಂದೆ ಸರಿದಿರಲಿಲ್ಲ. ವಿವಿಧ ಕಾರ್ಮಿಕ ಸಂಘಟನೆಯನ್ನು ಕಟ್ಟುವಲ್ಲಿ ಶ್ರಮಿಸಿದ್ದರು.
ಕೋಟೇಶ್ವರದಲ್ಲಿ ಕ್ಷೌರಿಕ ವೃತ್ತಿಯಲ್ಲಿದ್ದುಕೊಂಡು ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದರು. 2000ನೇ ಇಸವಿಯ ಸುಮಾರಿಗೆ ಪಕ್ಷದ ಪೂರ್ಣಾವಧಿ ಕಾರ್ಯಕರ್ತರಾಗಿ, ತ್ಯಜಿಸಿ ಪಕ್ಷದ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದರು. ಕೋಟೇಶ್ವರ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಉಳುವವನೇ ಹೊಲದೊಡೆಯ ಘೋಷಣೆಯಲ್ಲಿ ಭೂ ಸುಧಾರಣೆಗಾಗಿ ಹೋರಾಟದ ನೇತೃತ್ವ ವಹಿಸಿದ್ದರು. ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿಯೂ ಸಿಪಿಐಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿ, ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾಗಿ, ಕೃಷಿಕೂಲಿಕಾರರ ಸಂಘಟನೆಯಲ್ಲಿಯೂ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.