Sunday, September 8, 2024

ತೆರಿಗೆ ಅನ್ಯಾಯದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ | ಇದು ರಾಜಕೀಯ ಚಳವಳಿ ಅಲ್ಲ, ಅನ್ಯಾಯ ವಿರುದ್ಧ ಹೋರಾಟ : ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : 14ನೇ ಹಣಕಾಸು ಆಯೋಗದಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ 4.71 ಶೇಕಡಾ ಬಂದಿತ್ತು. 15ನೇ ಹಣಕಾಸು ಆಯೋಗದಲ್ಲಿ ಅದು ಶೇಕಡಾ 3.64 ಕ್ಕೆ ಇಳಿಯಿತು. ಇದರಿಂದ ಕರ್ನಾಟಕಕ್ಕೆ ಶೇಕಡಾ 40ರಿಂದ 45ರಷ್ಟು ತೆರಿಗೆ ಬರುವುದು ಕಳೆದುಕೊಂಡಿದ್ದೇವೆ. 14ನೇ ಹಣಕಾಸು ಆಯೋಗದ ಮಾನದಂಡವನ್ನೇ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಸರಿಸಿದ್ದರೆ 62 ಸಾವಿರದ 98 ಕೋಟಿ ರೂಪಾಯಿ ಹೆಚ್ಚಾಗಿ ಬರುತ್ತಿತ್ತು. ಅದನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿಅಂಶ ಸಹಿತವಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ನಾಯಕರು ‘ನಮ್ಮ ತೆರಿಗೆ ನಮ್ಮ ಹಕ್ಕು’ ಎಂಬ ಉದ್ಘೋಷದೊಂದಿಗೆ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಇಂದು(ಬುಧವಾರ) ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೂ ಮುನ್ನ ಕರ್ನಾಟಕ ಭವನದಲ್ಲಿ ವರದಿಗಾರರಿಗೆ ಸ್ಪಂದಿಸಿದ ಸಿದ್ದರಾಮಯ್ಯ, ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ ಎಂದು ಪುನರುಚ್ಛರಿಸಿದರು. ಅವರ ಮಾತಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸಾಥ್‌ ನೀಡಿ ವರದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

ಇನ್ನು, ಬರ ಪರಿಬಾರ ಬಂದಿಲ್ಲ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ರಾಜ್ಯದಲ್ಲಿ ಈ ವರ್ಷ ಆಗಿರುವ ಬರಗಾಲ ಬಗ್ಗೆ ಮನವಿ ಸಲ್ಲಿಸಿದ್ದೆವು. ಕೇಂದ್ರಕ್ಕೆ ಮನವಿ ಸಲ್ಲಿಸಿ, ಬರ ಅಧ್ಯಯನ ತಂಡ ಬಂದು ವರದಿ ನೀಡಿದ್ದರು. ನಂತರ ಹಲವು ಸಚಿವರು ಕೇಂದ್ರದ ಸಚಿವರುಗಳು, ಅಧಿಕಾರಿಗಳನ್ನು ಭೇಟಿ ಮಾಡಿದರು. ನಂತರ ನಾನೇ ಸ್ವತಃ ಪ್ರಧಾನ ಮಂತ್ರಿ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೆ. 5ತಿಂಗಳು ಕಳೆದರೂ ಇನ್ನೂ ಪರಿಹಾರ ಬಿಡುಗಡೆಯಾಗಿಲ್ಲ ಎಂದವರು ಆರೋಪಿಸಿದರು.

ಇದು ರಾಜಕೀಯ ಚಳವಳಿ ಅಲ್ಲ, ಅನ್ಯಾಯ ವಿರುದ್ಧ ಹೋರಾಟ:

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಅಷ್ಟೆ. ಇದು ರಾಜಕೀಯ ಚಳವಳಿ ಅಲ್ಲ. ನಮ್ಮ ಎಲ್ಲ ಶಾಸಕರು, ಸಚಿವರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದು ರಾಜಕೀಯ ಹೋರಾಟ ಅಲ್ಲ, ಇದು ಕನ್ನಡಿಗರ ಹಿತ ಕಾಪಾಡುವ ಚಳವಳಿ.

ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ನಿರಂತರವಾಗಿ ತಾರತಮ್ಯ ಮಾಡುತ್ತಿದೆ. ಈ ವಿಚಾರದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಆಗಿದೆ. ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ. ರಾಜ್ಯದ ಸಂಸದರಿಗೂ ಪತ್ರ ಬರೆದು ಮನವಿ ಮಾಡಿದ್ದೇನೆ. ಇದು ಐತಿಹಾಸಿಕವಾದ ಚಳವಳಿ. ಸುಮಾರು ಶೇ 40-45 ರಷ್ಟು ತೆರಿಗೆ ಪಾಲು ನಮಗೆ ಬರಬೇಕು. ನಾವು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತಿದ್ದೇವೆ. 100 ರೂ. ತೆರಿಗೆ ಕಟ್ಟಿದ್ದರೆ ಕೇವಲ 12 ರೂಪಾಯಿ ಅಷ್ಟೇ ನಮಗೆ ಬರುತ್ತಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ರಾಜ್ಯದಲ್ಲಿ ಕಳೆದ ವರ್ಷ ಹಿಂದೆಂದೂ ಕಂಡಿರದ ಭೀಕರ ಬರಗಾಲ ಬಂದು ನಾವು 17 ಸಾವಿರದ 900 ಕೋಟಿ ರೂಪಾಯಿ ಪರಿಹಾರ ಕೇಳಿದ್ದೆವು. ನರೇಗಾದ ಅಡಿಯಲ್ಲಿ ಕೆಲಸದ ದಿನಗಳನ್ನು 150 ದಿನ ಮಾಡಿ ಎಂದು ಕೇಳಿದ್ದೆವು. ಅದನ್ನೂ ಕೂಡ ಮಾಡಿಲ್ಲ ಎಂದು ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!