spot_img
Saturday, December 7, 2024
spot_img

ಪರಶುರಾಮ ಥೀಂ ಪಾರ್ಕ್ ಅವ್ಯವಹಾರ : ಹೋರಾಟಗಾರರ ಒತ್ತಡಕ್ಕೆ ಮಣಿದ ಸರ್ಕಾರ | ಪ್ರಕರಣ ಸಿಐಡಿ ತನಿಖೆಗೆ ಆದೇಶ

ಜನಪ್ರತಿನಿಧಿ (ಉಡುಪಿ): ಕೊನೆಗೂ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಯರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ.

ಪರಶುರಾಮ ಥೀಂ ಪಾರ್ಕ್ ನಲ್ಲಿ ನಡೆದ ಅವ್ಯವಹಾರದ ಬಗ್ಗೆ ಆರೋಪಿಸಿ ಸಾಮಾಜಿಕ ಹೋರಾಟಗಾರ್ತಿ ದಿವ್ಯ ನಾಯಕ್ ಎನ್ನುವವರು ಮಾಹಿತಿ ಹಕ್ಕಿನಲ್ಲಿ ಮಾಹಿತಿ ಪಡೆದು ತಮ್ಮ ಸಮಾನ ಮನಸ್ಕರ ಜತೆಗೂಡಿ ಭಾರಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ, ಧರಣಿ ನಡೆಸಿ ಪರಶುರಾಮ ಥೀಂ ಪಾರ್ಕ್ ನಲ್ಲಿ ನಡೆದಿರುವ ಭಾರಿ ದೊಡ್ಡ ಮಟ್ಟದ ಅವ್ಯವಹಾರವನ್ನು ಬಯಲಿಗೆ ಎಳೆದಿದ್ದರು. ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ಕುಮಾರ್, ಉಡುಪಿ ಜಿಲ್ಲಾಧಿಕಾರಿ, ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಅರುಣ್ ಕುಮಾರ್, ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ಪೂರ್ಣಿಮಾ ಹಾಗೂ ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ನಿರಂತರ ಹೋರಾಟ ಮಾಡಿ ಸರ್ಕಾರದ ಮೇಲೆ ಪ್ರಕರಣದ ತನಿಖೆಗೆ ಒತ್ತಾಯಿಸಿದ್ದರು. ಕೊನೆಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ‌.

ಈ ಹಿಂದಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪ್ರಕರಣದ ತನಿಖೆಗೆ ಸೂಚಿಸಿದ್ದರು. ಆದರೇ, ಯಾವುದೇ ತನಿಖೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿರಲಿಲ್ಲ.

ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಕೂಡ ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು ಎನ್ನುವುದು ಇಲ್ಲಿ ಉಲ್ಲೇಖಾರ್ಹ. ಪ್ರಕರಣದ ತನಿಖೆಯಾಗದಿದ್ದರೇ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ತಮ್ಮದೇ ಸರ್ಕಾರಕ್ಕೆ ಬೆದರಿಕೆ ಹಾಕಿದ್ದರು.

ಏನಿದು ಪ್ರಕರಣ?
ಕಾರ್ಕಳ ತಾಲೂಕಿನ ಬೈಲೂರಿನ ಉಮಿ ಕುಂಜ ಬೆಟ್ಟದ ಮೇಲೆ ಪರಶುರಾಮ ಥೀಮ್ ಪಾರ್ಕ್ ಅನ್ನು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 2023ರ ಜ. 17ರಂದು ಉದ್ಘಾಟಿಸಿದ್ದರು. ಇಡೀ ಥೀಮ್ ಪಾರ್ಕ್ ಅನ್ನು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಅದರಲ್ಲಿ ಬೃಹತ್ತಾದ ಪರಶುರಾಮನ ಪುತ್ಥಳಿ, ಬಯಲು ರಂಗ ಮಂದಿರ, ಆರ್ಟ್ ಗ್ಯಾಲರಿ, ಭಜನಾ ಮಂದಿರವನ್ನು ನಿರ್ಮಿಸಲಾಗಿತ್ತು.

ಈ ಮೂರ್ತಿಗೆ ಕಂಚು ಮತ್ತು ಉಕ್ಕು ಬಳಸಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಈ ಪ್ರಕರಣವನ್ನು ಬಯಲಿಗೆಳೆದ ಸಮಾನ ಮನಸ್ಕ ಹೋರಾಟಗಾರರು ಹಾಗೂ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಈ ಪುತ್ಥಳಿಯನ್ನು ಫೈಬರ್‌ನಿಂದ ನಿರ್ಮಿಸಲಾಗಿದ್ದು, ಕಂಚು, ಉಕ್ಕು ಬಳಸಲಾಗಿದೆ ಎಂದು ಹೇಳಿ ಆ ಹಣವನ್ನು ಈ ಥೀಮ್ ಪಾರ್ಕ್ ನಿರ್ಮಿಸುವ ಜವಾಬ್ದಾರಿ ಹೊತ್ತಿದ್ದ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಸುನಿಲ್ ಕುಮಾರ್ ಅವರು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿ, ಭಾರಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ, ಧರಣಿ ಮಾಡಿ ರಾಜ್ಯದ ಗಮನ ಸೆಳೆದಿದ್ದರು. ಅಲ್ಲದೇ ಸಾಕ್ಷಿ ಸಮೇತ ಕಾಮಗಾರಿಯಲ್ಲಾದ ಅಕ್ರಮವನ್ನು ಬಯಲಿಗೆಳೆದಿದ್ದರು. ತದನಂತರ ಈ ವಿವಾದ ರಾಜಕೀಯ ಆರೋಪ, ಪ್ರತ್ಯಾರೋಪಕ್ಕೂ ಕಾರಣವಾಗಿತ್ತು.

ಸಿಎಂ ಆದೇಶದಲ್ಲೇನಿದೆ?

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಫೆ. 2ರಂದು ಬರೆದ ಪತ್ರದಲ್ಲಿ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದ ಹಾಗೂ ಜನರ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ದೃಶ್ಯ ಮಾಧ್ಯಮ ಮತ್ತು ದಿನ ಪತ್ರಿಕೆಗಳು ವರದಿ ಮಾಡಿರುವುದು ತಿಳಿದುಬಂದಿದೆ. ಈ ಕುರಿತು ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ಸಿಒಡಿ ಅಥವಾ ಉನ್ನತ ಮಟ್ಟದ ತನಿಖೆ ನಡೆದಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿನಂತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಒಡಿ ತನಿಖೆಗೆ ಆದೇಶಿಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.

ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂಬ ಭರವಸೆ ಇದೆ : ದಿವ್ಯ ನಾಯಕ್
ಪರಶುರಾಮ ಥೀಂ ಪಾರ್ಕ್ ನಲ್ಲಿ ನಡೆದ ಅವ್ಯವಹಾರದ ಬಗ್ಗೆ ನಾವು ಸಮಾನ ಮನಸ್ಕರು ನಿರಂತರ ಹೋರಾಟ ಮಾಡಿಕೊಂಡು ಬಂದಿದ್ದೇವೆ. ನಮ್ಮ ಮೇಲೆ ಸುಳ್ಳು ಕೇಸ್ ಗಳನ್ನು ಕೂಡ ದಾಖಲಿಸಿದ್ದಾರೆ. ಎಲ್ಲಾ ಸಾಕ್ಷಿ ಸಮೇತ ಅವ್ಯವಹಾರದ ಬಗ್ಗೆ ಪ್ರತಿಭಟನೆ ಮಾಡಿದ್ದೇವೆ. ಪ್ರಕರಣವನ್ನು ಲೋಕಾಯುಕ್ತದಲ್ಲಿಯೂ ದಾಖಲಿಸಿದ್ದೇವು. ಅಷ್ಟಾಗಿಯೂ ಈವರೆಗೆ ಸರ್ಕಾರವಾಗಲಿ, ಲೋಕಾಯುಕ್ತವಾಗಲಿ ಈವರೆಗೆ ತನಿಖೆ ಮುಂದಾಗಿರಲಿಲ್ಲ. ಸದ್ಯ ಮುಖ್ಯಮಂತ್ರಿಗಳು ಪ್ರಕರಣವನ್ನು ಸಿಐಡಿಗೆ ಆದೇಶಿಸಿರುವುದು ಸ್ವಾಗತಾರ್ಹ. ನಮ್ಮ ಹೋರಾಟದ ಜೊತೆಗೆ ನಿಂತ ಎಲ್ಲರಿಗೂ ಧನ್ಯವಾದಗಳು. ನಮಗೆ ಸಂತೋಷವಿದೆ. ತನಿಖೆ ಪಾರದರ್ಶಕವಾಗಿ ನಡೆಯುತ್ತದೆ, ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎನ್ನುವ ಭರವಸೆ ಇದೆ ಎಂದು ಹೋರಾಟಗಾರ್ತಿ ದಿವ್ಯ ನಾಯಕ್ ಜನಪ್ರತಿನಿಧಿ ಪತ್ರಿಕೆಗೆ ತಿಳಿಸಿದ್ದಾರೆ.

ತನಿಖೆಯ ಆದೇಶವನ್ನು ಸ್ವಾಗತಿಸಿದ ಶಾಸಕ ಸುನೀಲ್ ಕುಮಾರ್ :
ತಮ್ಮ ಫೇಸ್ಬುಕ್‌ ಖಾತೆಯ ಮೂಲಕ ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್‌ ಕುಮಾರ್‌ ಹೇಳಿದ್ದಾರೆ.
ಈ ಬಗ್ಗೆ ತನಿಖೆ ನಡೆಯಬೇಕೆಂದು ಆರು ತಿಂಗಳು ಹಿಂದೆಯೇ ನಾನು ಆಗ್ರಹಿಸಿದ್ದೆ. ಸರ್ಕಾರ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸುವ ಜತೆಗೆ ಥೀಂ ಪಾರ್ಕ್ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಆದಷ್ಟು ಬೇಗ ಥೀಂ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಸಿಐಡಿ ತನಿಖೆಗೆ ಒತ್ತಾಯ ಹಾಗೂ ಮುತುವರ್ಜಿ ತೋರಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಶೇಷ ಧನ್ಯವಾದಗಳು ಎಂದು ಹೇಳಿದ್ದಾರೆ.

ಇನ್ನು, ಜನಪ್ರತಿನಿಧಿ ಪತ್ರಿಕೆ ಅಕ್ಟೋಬರ್‌ 26.2023 ರಂದು ಪರಶುರಾಮ ಥೀಂ ಪಾರ್ಕ್‌ ನಲ್ಲಿ ನಡೆದ ಅವ್ಯವಹಾರದ ಬಗ್ಗೆ ಸಮಗ್ರ ತನಿಖಾ ವರದಿಯನ್ನು ಪ್ರಕಟಿಸಿತ್ತು. ಅದರ ಫಾಲೋಅಪ್‌ ವರದಿಯನ್ನು ನಿನ್ನೆಯ(08-02-2024) ಸಂಚಿಕೆಯಲ್ಲಿ ಪ್ರಕಟಿಸಿತ್ತು. ಮಾತ್ರವಲ್ಲದೇ ಜನಪ್ರತಿನಿಧಿ ಯೂಟ್ಯೂಬ್‌ ವಾಹಿನಿಯಲ್ಲಿ ವಿಶೇಷ ವರದಿಗಳನ್ನು ಮಾಡಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!