Sunday, September 8, 2024

ಡಿಕೆಶಿ ಸಮ್ಮುಖದಲ್ಲಿ ಜಯಪ್ರಕಾಶ್ ಹೆಗ್ಡೆ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆ | ಉ-ಚಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಹೆಗ್ಡೆ ಕಣಕ್ಕೆ !

ಜನಪ್ರತಿನಿಧಿ (ಬೆಂಗಳೂರು) : ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆಯವರು ಇಂದು (ಮಂಗಳವಾರ, ಮಾ.12) ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅದ್ಯಕ್ಷರು ಆದ ಡಿ. ಕೆ ಶಿವಕುಮಾರ್‌ ಅವರು ಜಯಪ್ರಕಾಶ್‌ ಹೆಗ್ಡೆ ಅವರನ್ನು ಕಾಂಗ್ರೆಸ್‌ ಪಕ್ಷದ ಶಾಲು ಹೊದಿಸಿ, ಧ್ವಜವನ್ನು ನೀಡಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಂಡರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೂಡ ಹೆಗ್ಡೆ ಅವರೇ ಆಗುತ್ತಾರೆ ಎನ್ನುವ ವದಂತಿಗಳು ಕಳೆದ ಒಂದು ವರ್ಷದಿಂದಲೂ ಕೇಳಿ ಬಂದಿತ್ತು. ಇತ್ತೀಚೆಗಂತೂ ಆ ವದಂತಿ ಜೋರಾಗಿ ಕೇಳಿ ಬಂದಿತ್ತು.

ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರ್ಪಡೆಯಾಗುತ್ತಿರುವ ಬಗ್ಗೆ ಈವರೆಗೆ ಜಯಪ್ರಕಾಶ ಹೆಗ್ಡೆಯವರು ಯಾವುದೇ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ. ಆದರೇ, ಅವರ ಆಪ್ತ ಬಳಗ ಹಾಗೂ ಕಾಂಗ್ರೆಸ್‌ ಪಾಳಯ ಈ ಬಗ್ಗೆ ಮಾಹಿತಿಯನ್ನು ಹೊರಗೆ ಹಾಕಿದ್ದವು. ನಿನ್ನೆ(ಸೋಮವಾರ) ಸ್ವತಃ ಕೆ. ಜಯಪ್ರಕಾಶ್‌ ಹೆಗ್ಡೆ ಅವರೇ ಖುದ್ದಾಗಿ ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಗೊಳ್ಳುವುದಾಗಿ ಮಾಹಿತಿ ನೀಡಿದ್ದರು.

ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ ಇವರು ಅನಂತರ ಕಾಂಗ್ರೆಸ್ ಪಕ್ಷ ಸೇರಿ 2012ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದು ಸಂಸದರಾಗಿದ್ದರು.

2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಅನಂತರ ನಡೆದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಗೆ ಸೇರಿಕೊಂಡಿದ್ದರು. ಕಾಂಗ್ರೆಸ್‌ ಅವರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿತ್ತು. ಈಗ ಆ ಅವಧಿ ಮುಗಿದಿದೆ. ಮತ್ತೆ ಮರಳಿ ಕೆ. ಜಯಪ್ರಕಾಶ್‌ ಹೆಗ್ಡೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಹೆಗ್ಡೆ ಅವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿತ್ತು. ರಾಜ್ಯದಲ್ಲಿ ಬಹು ಚರ್ಚಿತ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರಕ್ಕೆ ಸಲ್ಲಿಸಿದರು.

ಆಯೋಗದ ಅಧ್ಯಕ್ಷ ಅವಧಿ‌ ಮುಗಿದ ಆನಂತರ ಕಾಂಗ್ರೆಸ್ ಸೇರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದರು. ಇದೀಗ ಕಾಂಗ್ರೆಸ್ ಪಕ್ಷ ಸೇರಪಡೆಗೊಂಡಿದ್ದಾರೆ. ಉಡುಪಿ ಹಾಗೂ ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿಯುವುದು ನಿಶ್ಚಿತವಾಗಿದೆ. ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಇನ್ನಷ್ಟೆ ಹೊರಬರಬೇಕಿದೆ.

ಸೇರ್ಪಡೆ ಕಾರ್ಯಕ್ರಮದಲ್ಲಿ ಡಾ. ಜಿ. ಪರಮೇಶ್ವರ್‌, ಬಿ. ಎಲ್‌. ಶಂಕರ್‌, ಲಕ್ಷ್ಮೀ ಹೆಬ್ಬಾಳ್ಕರ್‌, ಮಧು ಬಂಗಾರಪ್ಪ ಸೇರಿ ಮೊದಲಾದ ಕಾಂಗ್ರೆಸ್‌ ನಾಯಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!