spot_img
Saturday, June 21, 2025
spot_img

ನಂದಿನಿ ಹಾಲಿನ ಬೆಲೆ ಏರಿಕೆ : ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ…. : ಸಿಎಂ ಹೇಳಿದ್ದೇನು ?

ಜನಪ್ರತಿನಿಧಿ (ಬೆಂಗಳೂರು) : ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ, ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿದ್ದಾರೆ.

ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡುವುದರ ಮೂಲಕ ಮೇಲಿಂದ ಮೇಲೆ ಜನರಿಗೆ ಹೊರೆಯಾಗುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಉತ್ತರವೆಂಬಂತೆ ಹಾಲಿನ ದರ ಏರಿಕೆಯ ಬಗ್ಗೆ ವಿವರಿಸಿದ ಸಿಎಂ, ಈ ವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು, ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್‌ ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉದ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ಹೊರೆಯಾಗದ ರೀತಿಯಲ್ಲಿ ತಲುಪಿಸುವ ಸದುದ್ದೇಶವನ್ನು ಕೂಡ ಇದು ಹೊಂದಿದೆ ಎಂದು ಮಾಹಿತಿ ನೀಡಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್‌ ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ ರೂ.3 ಹೆಚ್ಚಳ ಮಾಡಿ ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮವು ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು ಜೊತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ. ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1 ಕೋಟಿ ಲೀಟರ್‌ ತಲುಪುವ ಹಂತಕ್ಕೆ ಬಂದಿದೆ ಎಂದು ಹೇಳಿದರು.

ಇನ್ನು, ಈಗಾಗಲೇ ಗರಿಷ್ಟ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ, ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್‌ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!