spot_img
Saturday, December 7, 2024
spot_img

ಸಂಸದ ಕೋಟ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿ ಹೈಕೋರ್ಟ್‌ ಆದೇಶ

ಜನಪ್ರತಿನಿಧಿ (ಬೆಂಗಳೂರು/ಉಡುಪಿ) : ‘ಲೋಕಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ’ ಎಂದು ಆರೋಪದಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮತ್ತಿತರರ ವಿರುದ್ಧ ದಾಖಲಾಗಿರುವ ದೂರಿಗೆ ಸಂಬಂಧಿಸಿದ ವಿಚಾರಣಾ ಕೋರ್ಟ್ ನ್ಯಾಯಿಕ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.

ಇದಕ್ಕೆ ಸಂಬಂಧಿಸಿದಂತೆ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲ್‌ಜಿ ಆರ್. ಮೆಂಡನ್ ಹಾಗೂ ತ್ರಿಶಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್. ಎಸ್.ಗೋಪಾಲಕೃಷ್ಣ ಸಲ್ಲಿಸಿದ್ದ ರಿಟ್ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾ. ಕೃಷ್ಣ ಎಸ್.ದೀಕ್ಷಿತ್ ವಿಚಾರಣೆ ನಡೆಸಿದರು.

ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿಯು ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 188ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರು ದಾಖಲಿಸುವ ಅಧಿಕಾರ ವ್ಯಾಪ್ತಿಯನ್ನು ಅಧಿಕಾರಿ ಹೊಂದಿಲ್ಲ. ದೂರು ದಾಖಲಿಸುವಲ್ಲಿ ಕಾನೂನು ಉಲ್ಲಂಫನೆಯಾಗಿದ್ದು, ಈ ಖಾಸಗಿ ದೂರನ್ನು ರದ್ದುಪಡಿಸಬೇಕು’ ಎಂದು ಕೋರಿದರು.

ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ‘ದೂರಿಗೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗೆ ತಡೆ ನೀಡಿ ಆದೇಶಿಸಿದ್ದಲ್ಲದೆ, ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.

ಏನಿದು ಪ್ರಕರಣ ? : ಜೆಡಿಎಸ್‌ ಬೆಂಬಲಿತ ಬಿಜೆಪಿಯ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಕಟಪಾಡಿ ಗ್ರಾಮದ ಖಾಸಗಿ ಕಾಲೇಜು ಆವರಣವೊಂದರಲ್ಲಿ 2024ರ ಮಾರ್ಚ್ 30ರಂದು ಕಾರ್ಯಕ್ರಮ ನಡೆಸಿದ್ದರು.

‘ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಲಾಗಿದೆ. ಭಾಷಣದ ಸಂದರ್ಭದಲ್ಲಿ ಪೂಜಾರಿ ಅವರು ಚುನಾವಣೆ ಯಲ್ಲಿ ಗೆಲುವು ಸಾಧಿಸಿದರೆ ವಿದ್ಯಾರ್ಥಿ ವೃಂದಕ್ಕೆ ಹಲವು ಉಚಿತ ಯೋಜನೆ ಜಾರಿಗೊಳಿಸಲಾಗುವುದು ಎಂబ ಭರವಸೆ ನೀಡಿದ್ದರು.

ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ’ ಎಂಬ ಆರೋಪದಡಿ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಸಂಚಾರ ಜಾಗೃತದಳದ ಅಧಿಕಾರಿಯು ನಗರದ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ 2024ರ ಏಪ್ರಿಲ್ 4ರಂದು ಖಾಸಗಿ ದೂರು ದಾಖಲಿಸಿದ್ದರು.

ದೂರಿನ ವಿಚಾರಣೆ ನಡೆಸಿದ್ದ ನ್ಯಾಯಾಲಯ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಬೇಕು ಎಂದು ಸ್ಥಳೀಯ ಠಾಣಾ ಪೊಲೀಸರಿಗೆ ನಿರ್ದೇಶಿಸಿತ್ತು. ಅದರಂತೆಯೇ, ಕೋಟ ಶ್ರಿನಿವಾಸ ಪೂಜಾರಿ ಹಾಗೂ ಇತರ ಮೂವರು ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿತ್ತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!