Wednesday, September 11, 2024

ರಾಜ್ಯದ ಪಶ್ಚಿಮಘಟ್ಟಗಳಲ್ಲಿ ಅನಧಿಕೃತವಾಗಿ, ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿದ ಹೋಂ ಸ್ಟೇ, ರೆಸಾರ್ಟ್ ಗಳ ತೆರವಿಗೆ ಸರ್ಕಾರ ಆದೇಶ

ಜನಪ್ರತಿನಿಧಿ (ಬೆಂಗಳೂರು) : ಪಶ್ಚಿಮಘಟ್ಟಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

ಪಶ್ಚಿಮಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸಲು ತತ್ ಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಲು ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ್‌ ಖಂಡ್ರೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ಎಚ್ಚರಿಕೆಯ ಗಂಟೆಯಾಗಿವೆ.

ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ.

ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು. ಪಶ್ಚಿಮಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸಲು ತತ್ ಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸುವಂತೆ ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!