Sunday, October 13, 2024

ಮುಡಾ ಹಗರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿ ಹೈಕೋರ್ಟ್‌ ಆದೇಶ !

ಜನಪ್ರತಿನಿಧಿ (ಬೆಂಗಳೂರು) : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಜಾಗ ಹಂಚಿಕೆ ಪ್ರಕರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು  ಇಂದು(ಮಂಗಳವಾರ) ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್‌ ನ ಏಕಸದಸ್ಯ ನ್ಯಾಯಪೀಠ ಆದೇಶಿಸಿದೆ.
ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ತಡೆಯಲು ಹೈಕೋರ್ಟ್‌ ನ್ಯಾಯಪೀಠ ನಿರಾಕರಿಸಿ ತೀರ್ಪು ನೀಡಿ ಆದೇಶಿಸಿದೆ.

ಹೈಕೋರ್ಟ್‌ ಹೇಳಿದ್ದೇನು ? 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​​, ಮುಖ್ಯಮಂತ್ರಿ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಮುಖ್ಯಮಂತ್ರಿ ಅವರು ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದಿದೆ.

ಪ್ರಕರಣದ ಬಗ್ಗೆ ನಡೆದಿತ್ತು ಸುದೀರ್ಘ ವಾದ-ಪ್ರತಿವಾದ :
ರಾಜ್ಯದ ಮುಖ್ಯಮಂತ್ರಿ ವಿರುದ್ಧವೇ ಎದುರಾದ ಆರೋಪ ಹಾಗೂ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ ವಿಷಯ ರಾಜ್ಯ ರಾಜಕಾರಣದಲ್ಲಿ ಪರ, ವಿರೋಧ ಚರ್ಚೆಗೆ ಕಾರಣವಾಗಿತ್ತು. ರಾಜಕೀಯ ವಲಯದಲ್ಲಿ ದೊಡ್ಡ ಕೋಲಾಹಲವನ್ನೇ ಸೃಷ್ಟಿ ಮಾಡಿತ್ತು. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ, ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿದ್ದರು.

‘ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯಪಾಲರು ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದ್ದ ಸಚಿವ ಸಂಪುಟ ಸಭೆ, ಅವರಿಗೆ ಧಿಕ್ಕಾರ ಹೇಳುವ ತೀರ್ಮಾನವನ್ನು ಕೈಗೊಂಡಿತ್ತು. ‘ಅನುಮತಿ ವಾಪಸ್ ಪಡೆಯಬೇಕು’ ಎಂದೂ ಸಂಪುಟ ಸಭೆ ಒತ್ತಾಯಿಸಿತ್ತು. ಸಿದ್ದರಾಮಯ್ಯ ಸಲ್ಲಿಸಿದ್ದ ಈ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಉಭಯ ಪಕ್ಷಗಳ ದಿಗ್ಗಜ ವಕೀಲರ ವಾದ-ಪ್ರತಿವಾದವನ್ನು ಆಲಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ತೀರ್ಪನ್ನು ಇದೇ 12ರಂದು ಕಾಯ್ದಿರಿಸಿತ್ತು.

ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಪ್ರಕರಣದ ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಎಸ್.ಪಿ.ಪ್ರದೀಪ್ ಕುಮಾ‌ರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

ಅರ್ಜಿದಾರ ಸಿದ್ದರಾಮಯ್ಯ ಪರವಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಅಭಿಷೇಕ್ ಮನು ಸಿಂಫ್ಟಿ, ರವಿವರ್ಮ ಕುಮಾ‌ರ್ ಮತ್ತು ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪರ ಅಡ್ವಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ಸಾಲಿಸಿಟರ್ ಜನರಲ್‌ ತುಷಾರ್ ಮೆಹ್ರಾ, ಟಿ.ಜೆ.ಅಬ್ರಹಾಂ ಪರ ರಂಗನಾಥ ರೆಡ್ಡಿ, ಸ್ನೇಹಮಯಿ ಕೃಷ್ಣ ಪರ ಸುಪ್ರೀಂ ಕೋರ್ಟ್‌ ಹಿರಿಯ ವಕೀಲರಾದ ಮಣಿಂದ‌ರ್ ಸಿಂಗ್, ಕೆ.ಜಿ.ರಾಘವನ್, ಲಕ್ಷ್ಮಿ ಅಯ್ಯಂಗಾರ್, ಎಸ್.ಪಿ.ಪ್ರದೀಪ್ ಕುಮಾರ್ ಪರ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿದ್ದರು. ಸಿದ್ದರಾಮಯ್ಯ ಪರ ವಕೀಲ ಶತಭಿಷ ಶಿವಣ್ಣ ಹಾಗೂ ರಾಜ್ಯಪಾಲರ ಕಾರ್ಯದರ್ಶಿ ಪರ ಹೈಕೋರ್ಟ್ ವಕೀಲರಾದ ಕೆ.ಅಭಿಷೇಕ್ ವಕಾಲತ್ತು ವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!