spot_img
Tuesday, March 31, 2026
spot_img

ಜೈ ಶ್ರೀರಾಮ್‌ ಘೋಷಣೆಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ : ಹೈಕೋರ್ಟ್‌

ಜನಪ್ರತಿನಿಧಿ (ಬೆಂಗಳೂರು) : ಜೈ ಶ್ರೀರಾಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರ ವಿರುದ್ಧ ಧಾರ್ಮಿಕ ನಂಬಿಕೆಗಳ ಧಕ್ಕೆ ಮಾಡಿದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳದ ಬದ್ರಿಯಾ ಜುಮ್ಮಾ ಮಸೀದಿಯ ಆವರಣ ಪ್ರವೇಶಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಎಫ್‌ಐಆರ್ ಮತ್ತು ಈ ಸಂಬಂಧಿಸಿದಂತೆ ಪುತ್ತೂರು 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಬಿಳಿನೆಲೆ ಗ್ರಾಮದ ಯುವಕರಾದ ಕೀರ್ತನ್ ಕುಮಾರ್ ಮತ್ತು ಎನ್.ಎಂ.ಸಚಿನ್ ಕುಮಾರ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 295-ಎ ಅಡಿ ಪ್ರಕರಣ ದಾಖಲಿಸಲಾಗಿದೆ. ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಉದ್ದೇಶಪೂರ್ವಕವಾಗಿ ಇಲ್ಲವೇ ದುರುದ್ದೇಶಪೂರ್ವಕವಾಗಿ ಕೆರಳಿಸುವ ಕೃತ್ಯವನ್ನು ಐಪಿಸಿ ಸೆಕ್ಷನ್ 295-ಎ ಹೇಳುತ್ತದೆ. ಆದರೆ, ಯಾರಾದರೂ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಅದು ಇನ್ಯಾವುದೋ ವರ್ಗದ ಧಾರ್ಮಿಕ ಭಾವನೆಗಳನ್ನು ಹೇಗೆ ಕೆರಳಿಸುತ್ತದೆ ಎಂದು ಅರ್ಥವಾಗುತ್ತಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಕಡಬ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ಖುದ್ದು ದೂರುದಾರರೇ ಹೇಳಿದ್ದಾರೆ. ಹೀಗಿರುವಾಗ, ಇಂತಹ ಘಟನೆ ಆ ಪ್ರದೇಶದಲ್ಲಿ ಸೌಹಾರ್ದತೆಗೆ ಧಕ್ಕೆ ತರುತ್ತದೆ ಎಂದು ಕಲ್ಪಿಸಿಕೊಳ್ಳುವುದಕ್ಕೆ ಯಾವುದೇ ಅವಕಾಶವಿಲ್ಲ ಎಂದು ಹೇಳುವುದರ ಮೂಲಕ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ಆರೋಪಿಗಳ ವಿರುದ್ಧ ಕಿಡಿಗೇಡಿತನ, ಸಮಾಜದಲ್ಲಿ ಬಿರುಕು ಮೂಡಿಸುವುದು, ಅತಿಕ್ರಮ ಪ್ರವೇಶ ಹಾಗೂ ಬೆದರಿಕೆ ಆರೋಪಗಳನ್ನು ಮಾಡಲಾಗಿದೆ. ಆದರೆ, ದೂರು, ವಕೀಲರ ವಾದ ಮತ್ತು ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದಾಗ ಅಂತಹ ಆರೋಪಗಳಿಗೆ ಯಾವುದೇ ಪುರಾವೆಗಳು ಕಾಣುತ್ತಿಲ್ಲ. ಆದ್ದರಿಂದ, ಆರೋಪಿಗಳ ವಿರುದ್ಧದ ಪ್ರಕರಣ ಮುಂದುವರೆಸುವುದು ಕಾನೂನಿನ ದುರ್ಬಳಕೆ ಆಗಲಿದೆ ಎಂದು ಕೋರ್ಟ್‌ ಹೇಳಿದೆ. ಇದೇ ವೇಳೆ ಇಬ್ಬರು ಯುವಕರ ಅರ್ಜಿಯನ್ನು ಮಾನ್ಯ ಮಾಡಿ, ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!