spot_img
Sunday, February 15, 2026
spot_img

ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ, ಬಿಜೆಪಿಯವರು ರಾಜಕೀಯ ಎನ್ನುತ್ತಾರೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಹುಬ್ಬಳ್ಳಿ) : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು, ಈಗ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ. ರಾಜ್ಯ ಬಿಜೆಪಿ ರಾಜಕಾರಣಕ್ಕಾಗಿ ವಕ್ಫ್ ನೋಟಿಸ್ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟಿಸ್ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿ ಮಾಧ್ಯಮಗಳ ವರದಿಗಾರರಿಗೆ ಪ್ರತಿಕ್ರಿಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಸಚಿವರಾದ ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟೀಸು ನೀಡಿದ್ದಲ್ಲಿ ಅದನ್ನು ವಾಪಸ್ಸು ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದೇನೆ. ಮುಸ್ಲಿಂ, ಹಿಂದೂ, ಕ್ರಿಶ್ಚಿಯನ್ ಆಗಿರಲಿ, ಒಕ್ಕಲೆಬ್ಬಿಸಬಾರದು ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದೇನೆ.

ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟಿಸ್ ಹಿಂಪಡೆಯಲಾಗಿದೆ. ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್ ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟೀಸು ಕೊಟ್ಟಿದ್ದಾರೆ? ಬಿಜೆಪಿಯ ಈ ಡಬ್ಬಲ್ ಗೇಮ್  ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದರು.

16ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ  ಅನ್ಯಾಯವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ. ಸುಮಾರು 4.50 ಲಕ್ಷ  ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು ₹55 ರಿಂದ ₹60 ಸಾವಿರ ಕೋಟಿ ಮಾತ್ರ. ಇದು ನ್ಯಾಯವೇ? ಈ ಬಗ್ಗೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ. ಬಿಜೆಪಿಯ ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಮಾತನಾಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಅದು ರಾಜಕೀಯ ಎಂದರು, ಇದಕ್ಕೆ ಏನು ಹೇಳಬೇಕು? ನ್ಯಾಯಾಲಯಕ್ಕೆ ಹೋದರೆ ನ್ಯಾಯ ಸಿಗುತ್ತದೆ ಎಂದು ಭಾವಿಸಿಲ್ಲ,  ಏಕೆಂದರೆ 5 ವರ್ಷಕ್ಕೊಮ್ಮೆ ಸಂವಿಧಾನದ ಪ್ರಕಾರ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಅವರ ಶಿಫಾರಸ್ಸಿನ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೋಗಬೇಕಾದ ತೆರಿಗೆ ಬಗ್ಗೆ  ನಿರ್ಧಾರವಾಗುತ್ತದೆ. 15ನೇ ಹಣಕಾಸು ಆಯೋಗದವರು ಕೆಲವು ಶಿಫಾರಸ್ಸು ಮಾಡಿದ್ದಾರೆ. ₹5,495 ಕೋಟಿ ರೂಪಾಯಿಗಳನ್ನು ವಿಶೇಷ ಅನುದಾನ ನೀಡಬೇಕೆಂದು ಹೇಳಿದ್ದರು. ಪೇರಿಫೆರಲ್ ರಿಂಗ್ ರೋಡ್ ಹಾಗೂ ಕೆರೆಗಳ ಅಭಿವೃದ್ಧಿಗೆ ತಲಾ 3000 ಕೋಟಿ ರೂಪಾಯಿ ನೀಡಲು ಶಿಫಾರಸ್ಸು  ಮಾಡಿದ್ದರು. ಒಟ್ಟು ₹11,495 ಕೋಟಿಗಳನ್ನು ಕೊಡಬೇಕಿತ್ತು, ಆದರೆ ಕೊಟ್ಟಿಲ್ಲ. ಪ್ರಹ್ಲಾದ ಜೋಶಿಯವರು ಇದನ್ನು ಕೇಂದ್ರದಿಂದ ಕೇಳಬೇಕಲ್ಲವೇ? ₹11,495 ಕೋಟಿ ಕೊಟ್ಟಿದ್ದಾರೆಯೇ? ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುವೆ. ಈ ಸವಾಲು ಸ್ವೀಕರಿಸಿ ಪ್ರಹ್ಲಾದ ಜೋಶಿ ರಾಜಕೀಯ ಬಿಡುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯವರು ಗ್ಯಾರಂಟಿಗೆ ವಿರುದ್ಧವಾಗಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲಾ ಜಾತಿ ಧರ್ಮದವರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುತ್ತಿದ್ದೇವೆ. ಅವರು ಮುಖ್ಯವಾಹಿನಿಗೆ ಬರಬೇಕೆಂದು ಈ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸಮಾನತೆ ಬರಬಾರದು. ಬಡವರು ಇರಬೇಕು. ಅದಕ್ಕೆ ಅವರನ್ನು ಬಡವರ ವಿರೋಧಿಗಳು ಎಂದು ಕರೆಯುವುದು. ಶಕ್ತಿ ಇಲ್ಲದಿದ್ದರೆ ತಾನೇ ದುರುಪಯೋಗ ಮಾಡಿಕೊಳ್ಳಲು ಸಾಧ್ಯವಾಗುವುದು. ಆರ್ಥಿಕ, ಸಾಮಾಜಿಕ ಶಕ್ತಿ ಬಡವರಿಗೆ ಬರಬಾರದೆಂಬ ತತ್ವದಲ್ಲಿ ಬಿಜೆಪಿಗೆ ನಂಬಿಕೆ ಇದೆ. ಬಿಜೆಪಿ ಪಕ್ಷ 600 ಭರವಸೆಗಳನ್ನು 2018 ರಲ್ಲಿ ನೀಡಿತ್ತು. ಅವುಗಳಲ್ಲಿ ಎಷ್ಟು ಈಡೇರಿಸಿದ್ದಾರೆ? ನಾವು 165 ಭರವಸೆ ಕೊಟ್ಟು 158 ಈಡೇರಿಸಿದ್ದಾಗಿ ಲೆಕ್ಕ ಕೊಡುತ್ತಿದ್ದೇವೆ. ಅವರು ಎಷ್ಟು ಭರವಸೆ ನೀಡಿ ಎಷ್ಟನ್ನು ಈಡೇರಿಸಿದ್ದಾರೆ ಎನ್ನುವ‌ ಲೆಕ್ಕ ಕೊಡುತ್ತಾರೆಯೇ?

ವಕ್ಫ್ ವಿಚಾರವಾಗಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಅವರು ಯಾವಾಗಲೂ ನೈಜ ವಿಷಯಗಳನ್ನು ಬಿಟ್ಟು ಸುಳ್ಳು ಆರೋಪಗಳನ್ನು ಮಾಡುವುದು, ರಾಜಕಾರಣಕ್ಕಾಗಿ ಪ್ರತಿಭಟನೆ ಮಾಡುವುದು ಇದನ್ನು ಮಾತ್ರ ಮಾಡುತ್ತಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಒಬ್ಬ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ? ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ. ಕೋಮುವಾದ ಮಾಡುವುದೇ ಅವರ ಕಸುಬು. ಸಮಾಜವನ್ನು  ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ. ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗೂ ಮತ ಪಡೆಯಲು ಪ್ರಯತ್ನ ಮಾಡುತ್ತಾರೆ ಎಂದರು.

ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ? ಹಿಂದೆ ಮುಖ್ಯಮಂತ್ರಿ ಆಗಿದ್ದಾಗ 165 ಭರವಸೆ ಕೊಟ್ಟು 158 ಭರವಸೆಗಳನ್ನು ಈಡೇರಿಸಿದೆವು.. ಅವು ಅಭಿವೃದ್ಧಿಯಲ್ಲವೆ? 3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳಲ್ಲಿ 52 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡುತ್ತಿದ್ದೇವೆ. ಸುಮಾರು 60 ಸಾವಿರ ಕೋಟಿ ಅಭಿವೃದ್ಧಿಗೆ ವೆಚ್ಚ ಮಾಡುತ್ತಿದ್ದೇವೆ. ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ರಸ್ತೆ, ಸೇತುವೆ, ನಿರ್ಮಾಣಕ್ಕಾಗಿ ವೆಚ್ಚವಾಗುತ್ತಿದೆ. ಇವೆಲ್ಲ ಅಭಿವೃದ್ದಿಯಲ್ಲವೇ? ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!