spot_img
Monday, March 16, 2026
spot_img

ದೇಶದ ಐಕ್ಯತೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಇಂದಿರಾ ಗಾಂಧಿ ಆದರ್ಶ ಮಹಿಳೆ | ಬಿಜೆಪಿ ಸಂವಿಧಾನ ಬದಲಾಗಬೇಕೆಂದು ಬಯಸುವ ಪಕ್ಷ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ದೇಶದ ಐಕ್ಯತೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಇಂದಿರಾ ಗಾಂಧಿಯವರ ಬದುಕು ನಮ್ಮೆಲ್ಲರಿಗೂ ಆದರ್ಶ. ಅವರು ಕೆಚ್ಚೆದೆಯಿಂದ ದೇಶವನ್ನು ಆಳಿದರು ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು(ಮಂಗಳವಾರ) ನಡೆದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂದಿಯವರ  ಜನ್ಮ ದಿನಾಚರಣೆ ಕಾರ್ಯಕ್ರಮದ ಸಭೆಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಕಾಂಗ್ರೆಸ್ ಪಕ್ಷ ಸದಾ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತರ ಪರವಾಗಿರುವ ಪಕ್ಷ.  ಸಂವಿಧಾನದಲ್ಲಿ ಅಪಾರವಾದ ನಂಬಿಕೆ ಇಟ್ಟುಕೊಂಡು ಸಂವಿಧಾನದ ರೀತ್ಯಾ ಕೆಲಸ ಮಾಡುತ್ತಿರುವ ಪಕ್ಷ. ಯಾರೇ ಅಧಿಕಾರಕ್ಕೆ ಬಂದರೂ ಸಂವಿಧಾನದ ರೀತ್ಯಾ ಕೆಲಸ ಮಾಡಬೇಕು. ಅದರ ಧ್ಯೇಯೋದ್ದೇಶಗಳನ್ನು ಜಾರಿ ಮಾಡಬೇಕು. ಪ್ರತಿಯೊಬ್ಬರೂ ಇದನ್ನು ಪಾಲನೆ ಮಾಡಬೇಕಾದದ್ದು ಕರ್ತವ್ಯ ಎಂದು ಅವರು ಹೇಳಿದರು.

ಇಂದಿರಾ ಗಾಂಧಿಯವರು ಬಡವರ ಪರವಾಗಿ ಬಹಳಷ್ಟು ಕೆಲಸಗಳನ್ನು ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ, ಗರೀಬಿ ಹಟಾವೋ ಕಾರ್ಯಕ್ರಮ, ಬ್ಯಾಂಕುಗಳ ರಾಷ್ಟ್ರೀಕರಣ  ಮುಂತಾದವುಗಳ ಫಲ ಬಡವರಿಗೆ ದೊರಕಬೇಕು. ಬಡವರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿಯನ್ನು ಪಡೆದುಕೊಳ್ಳಬೇಕೆಂಬ ಉದ್ದೇಶ ಅವರಿಗೆ ಇತ್ತು. ಬ್ಯಾಂಕುಗಳು ರಾಷ್ಟ್ರೀಕರಣವಾಗುವ ಮೊದಲು ಬಡವರು ಬ್ಯಾಂಕುಗಳ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿರಲಿಲ್ಲ. ಇಂದಿರಾ ಗಾಂಧಿಯವರು ರಾಷ್ಟ್ರೀಕರಣ ಮಾಡಿದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು. ಇದು ಕಾಂಗ್ರೆಸ್ ಪಕ್ಷದ ಸಾಧನೆ ಎಂದರು.

ಈಗ ಅಧಿಕಾರದಲ್ಲಿರುವ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ಹೀಗಾಗಿ ಅವರು ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಬಿಜೆಪಿ ಸಂವಿಧಾನ ಬದಲಾಗಬೇಕೆಂದು ಬಯಸುವ ಪಕ್ಷ. ನಮಗೆ ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆಯಿದ್ದರೆ, ಬಿಜೆಪಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಆರ್ಥಿಕ ಅಧಿಕಾರ ಕೇಂದ್ರೀಕೃತಗೊಳ್ಳುತ್ತಿದೆ. ನೆಹರೂ,  ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇಲ್ಲದೇ ಹೋಗಿದ್ದರೆ ಈ ದೇಶದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಲು ಸಾಧ್ಯವಾಗುತ್ತಿರಲಿಲ್ಲ. ಮಹಾತ್ಮ ಗಾಂಧಿ ದೇಶದಲ್ಲಿ ಗ್ರಾಮ ಸ್ವರಾಜ್ಯವಾಗಬೇಕೆಂದು ಬಯಸಿದ್ದರು. ಮಹಿಳೆಯರಿಗೆ ಮೀಸಲಾಗಿ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದವರು ಹೇಳಿದರು.

ರಾಜೀವ್ ಗಾಂಧಿಯವರು ಅಧಿಕಾರದಲ್ಲಿದ್ದಾಗ ಸಂವಿಧಾನಕ್ಕೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರಣದ ಮೂಲಕ ಪಟ್ಟಣ ಪಂಚಾಯತಿ, ನಗರಸಭೆಗಳಿಗೆ ಮಹಿಳಾ ಮೀಸಲಾತಿ ನೀಡಿದರು. ಇದಾಗದೇ ಹೋಗಿದ್ದರೆ ಮಹಿಳೆಯರಿಗೆ 55%  ಮೀಸಲಾತಿ ದೊರೆಯುತ್ತಿರಲಿಲ್ಲ. ರಾಮಾ ಜೋಯಿಸ್ ಎಂಬ ಬಿಜೆಪಿ ಸಂಸದರು ಇದನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿದ್ದರು. ಅಧಿಕಾರ ಹಂಚಿಕೆಯಾಗಬೇಕೆಂದಿದ್ದರೆ ಅವರು ನ್ಯಾಯಾಲಯಕ್ಕೆ ಯಾಕೆ ಹೋಗುತ್ತಿದ್ದರು? ಎಂದು ಪ್ರಶ್ನಿಸಿದ್ದಲ್ಲದೇ, ಕಾಂಗ್ರೆಸಿನ ಕೆಲವರಲ್ಲಿ ಸೈದ್ಧಾಂತಿಕ ಸ್ಪಷ್ಟತೆ ಇಲ್ಲದ ಕಾರಣಕ್ಕೆ ಅವರು ಹಾಗೂ ಇರಲಿ, ಹೀಗೂ ಇರಲಿ ಎನ್ನುತ್ತಾರೆ. ಸ್ಪಷ್ಟತೆ ಇಲ್ಲದೇ ಹೋದರೆ ಕಾಂಗ್ರೆಸ್ ಸಿದ್ಧಾಂತವನ್ನು ಬೆಳೆಸಲು ಸಾಧ್ಯವಿಲ್ಲ. ಬಿಜೆಪಿ ಮಹಿಳೆಯರ, ಬಡವರ ವಿರೋಧಿಗಳು ಎಂಬುದನ್ನು ಜನರಿಗೆ ಅರ್ಥಮಾಡಿಸಬೇಕು.

ಬಿಜೆಪಿ ನಾಯಕರು ದೇಶಭಕ್ತಿಯ ಬಗ್ಗೆ ಉದ್ದನೆಯ ಭಾಷಣ ಮಾಡುತ್ತಾರೆ ಅಷ್ಟೇ. ದೇಶಭಕ್ತಿ ಉಳಿದಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ. ಇದರ ಆಧಾರದ ಮೇಲೆ ಈ ದೇಶವನ್ನು , ನಾಡನ್ನು ಕಟ್ಟಬೇಕಾಗುತ್ತದೆ. ಇಂದಿರಾ ಗಾಂಧಿಯವರನ್ನು ನೆನೆಸಿಕೊಂಡು ಅವರಿಂದ ಸ್ಪೂರ್ತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ಮಹಿಳೆಯರಿಗೆ ಮೀಸಲಾತಿಯನ್ನು 2028 ರಲ್ಲಿ ಕೊಡುವುದಾಗಿ ಹೇಳುವ ನರೇಂದ್ರ ಮೋದಿ ಅವರು ಅದನ್ನು ಈಗಲೇ ಮಾಡಬಹುದಿತ್ತು. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಹಾಗೂ ಬದ್ಧತೆ ಅಗತ್ಯವಿದೆ. ಸಂಸತ್ತಿನಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ನಮ್ಮ ತಕರಾರೇನಿಲ್ಲ, ನಾವೇ ಇದನ್ನು ಜಾರಿಗೆ ತರಬೇಕು ಎಂದಿದ್ದೆವು. ಜಿಲ್ಲಾ ಪಂಚಾಯತಿ, ಪಟ್ಟಣ ಪಂಚಾಯತಿಗಳಲ್ಲಿ 50% ಮೀಸಲಾತಿ ಇದೆ. ಮಹಿಳೆಯರಿಗೆ ಸಮಾನ ಅವಕಾಶಗಳು ದೊರಕಬೇಕು. ಸಂಸತ್ತು, ವಿಧಾನಸಭೆಯಲ್ಲಿಯೂ ಮೀಸಲಾತಿ ನೀಡಲು ನಮ್ಮ ತಕರಾರು ಇಲ್ಲ.

ಸರ್ಕಾರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತಿದೆ ಎಂದು ಮಾದ್ಯಮಗಳು ಬರೆದಿವೆ, ಆದರೆ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಸೂಚಿಸಲಾಗಿದೆ. ಎಲ್ಲಾ ಬಡವರಿಗೂ ಸೌಲಭ್ಯ ದೊರಕಬೇಕು. ಅನರ್ಹರಿಗೆ ಮಾತ್ರ ಎಪಿಎಲ್ ಕಾರ್ಡು ನೀಡಬೇಕು ಎಂದು ಹೇಳಿದ್ದೇನೆ. ಕಾಂಗ್ರೆಸ್ ಪಕ್ಷ ಈ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ. ಅವರು ಯಾವತ್ತೂ ಶ್ರೀಮಂತರ, ಮೇಲ್ಜಾತಿಯವರ ಪರ. 1925 ರಲ್ಲಿ ಆರ್.ಎಸ್.ಎಸ್  ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೆ ಪ್ರಜಾಪ್ರಭುತ್ವ, ಮೀಸಲಾತಿ, ಸಂವಿಧಾನದ ಪರವಾಗಿ ಮಾತನಾಡಿಲ್ಲ. ಕಾಂಗ್ರೆಸ್ ಸಿದ್ದಾಂತದಲ್ಲಿ ನಂಬಿಕೆ ಇಟ್ಟು ಕೆಲಸ ಮಾಡೋಣ, ಪಕ್ಷವನ್ನು ಬಲಪಡಿಸುವ ಕೆಲಸ ಮಾಡೋಣ ಎಂದು ಶಪಥ ಮಾಡೋಣ ಎಂದು ಕಾಂಗ್ರೆಸ್‌ ಮುಖಂಡರಿಗೆ, ಕಾರ್ಯಕರ್ತರಿಗೆ ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!